ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹೆಚ್.ಎಸ್. ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಜುನಾಥ್ ಹೆಚ್.ಎಸ್., ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು. “ಲಕ್ಷಾಂತರ ವಿದ್ಯಾರ್ಥಿಗಳ ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಹೊಡೆತ ನೀಡಿದೆ. ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ” ಎಂದು ಹೇಳಿದರು.
ಮರು ಪರೀಕ್ಷೆಯಿಂದ ವಿದ್ಯಾರ್ಥಿಗಳು ಮತ್ತೆ ತರಬೇತಿ ಹಾಗೂ ಶುಲ್ಕದ ಹೊರೆ ಎದುರಿಸಬೇಕಾಗುತ್ತದೆ. ಬಡ ಹಾಗೂ ರೈತ ಕುಟುಂಬಗಳ ಮಕ್ಕಳಿಗೆ ಇದರಿಂದ ಹೆಚ್ಚಿನ ತೊಂದರೆ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದು, ಮರು ಪರೀಕ್ಷೆಯಿಂದ ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಹೆಚ್ಚಲಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲೂ ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿತ್ತು ಎಂದು ಆರೋಪಿಸಿದ ಅವರು, ಪೇಪರ್ ಸೋರಿಕೆ ಮಾಫಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.























































