ನವದೆಹಲಿ: ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಸೋಮವಾರ ದೇಶದ ಸನ್ನದ್ಧತೆ ಮತ್ತು ಕಣ್ಗಾವಲು ಕ್ರಮಗಳ ಪರಿಶೀಲನಾ ಸಭೆ ನಡೆಸಿದರು.
ಬುಂಡಿಬುಗ್ಯೊ ತಳಿಯ ಎಬೋಲಾ ಸೋಂಕಿನ ಯಾವುದೇ ಪ್ರಕರಣ ಭಾರತದಲ್ಲಿ ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಈ ಸೋಂಕನ್ನು ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಎಂದು ಹೇಳಿದರು.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ಡಿಜಿಎಚ್‌ಎಸ್, ನಾಗರಿಕ ವಿಮಾನಯಾನ ಮತ್ತು ವಲಸೆ ಅಧಿಕಾರಿಗಳ ಸಹಯೋಗದಲ್ಲಿ ದೇಶಾದ್ಯಂತ ಕಣ್ಗಾವಲು ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಹಾಗೂ ಪ್ರವೇಶ ಬಿಂದುಗಳಲ್ಲಿ ತಪಾಸಣೆ ಮತ್ತು ನಿಗಾವ್ಯವಸ್ಥೆ ಹೆಚ್ಚಿಸಲಾಗಿದ್ದು, ಸೋಂಕು ತಪಾಸಣೆ, ಕ್ವಾರಂಟೈನ್, ಪ್ರಯೋಗಾಲಯ ಪರೀಕ್ಷೆ, ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆ ಕುರಿತ ಮಾರ್ಗಸೂಚಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರವಾನಿಸಲಾಗಿದೆ.
ಟ್ರ್ಯಾಕಿಂಗ್, ಪರೀಕ್ಷೆ ಹಾಗೂ ಕಣ್ಗಾವಲು ವ್ಯವಸ್ಥೆಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಆರೋಗ್ಯ ಅಧಿಕಾರಿಗಳಿಗೆ ನಡ್ಡಾ ಸೂಚನೆ ನೀಡಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ, ಉಗಾಂಡಾ ಮತ್ತು ದಕ್ಷಿಣ ಸುಡಾನ್ಗಳಿಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಭಾರತೀಯರಿಗೆ ಸಲಹೆ ನೀಡಿತ್ತು.

























































