ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಅಂತಿಮ ಹಂತ ತಲುಪುತ್ತಿದ್ದಂತೆ, ಇದೀಗ ನೂತನ ಸರ್ಕಾರದ ಸಚಿವ ಸಂಪುಟ ರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಟುವಟಿಕೆ ಚುರುಕುಗೊಳಿಸಿದೆ. ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಆಯ್ಕೆಯಾದ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಮೂಲಗಳ ಪ್ರಕಾರ, ಮೊದಲ ಹಂತದಲ್ಲಿ 10 ರಿಂದ 12 ಸಚಿವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಕುರಿತು ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಸಿದ್ಧಪಡಿಸಿರುವ ಪ್ರಾಥಮಿಕ ಪಟ್ಟಿಯನ್ನು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಪಟ್ಟಿಯನ್ನು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಪರಿಶೀಲಿಸಿದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಂತಿಮ ಅನುಮೋದನೆಗೆ ಕಳುಹಿಸಲಾಗುವುದು ಎಂದು ತಿಳಿದುಬಂದಿದೆ.
ಸದ್ಯ ಚರ್ಚೆಯಲ್ಲಿರುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್, ಸತೀಶ್ ಜಾರಕಿಹೊಳಿ, ಡಾ. ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್ ಹಾಗೂ ಕೃಷ್ಣ ಬೈರೇಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
ಇದಲ್ಲದೆ, ಡಾ. ಯತೀಂದ್ರ ಸಿದ್ದರಾಮಯ್ಯ ಅಥವಾ ಬೈರತಿ ಸುರೇಶ್, ಹಾಗೆಯೇ ಎಂ.ಬಿ. ಪಾಟೀಲ್ ಅಥವಾ ಈಶ್ವರ ಖಂಡ್ರೆ ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಆದಾಗ್ಯೂ, ಸಚಿವ ಸಂಪುಟದ ಅಂತಿಮ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಹೈಕಮಾಂಡ್ ಅನುಮೋದನೆಯ ಬಳಿಕವೇ ಸಚಿವ ಸ್ಥಾನಗಳ ಕುರಿತು ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆಯಿದೆ.





























































