
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಪ್ರಮುಖ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್)ಯಾಗಿ ನೇಮಕ ಮಾಡಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.
ಇದೇ ವೇಳೆ, ರಾಜೇಂದ್ರ ಚೋಳನ್ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೊಂದಿರುವ ಹೆಚ್ಚುವರಿ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.
ಮತ್ತೊಂದೆಡೆ, ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಸರ್ಕಾರದ ಆದೇಶದ ಪ್ರಕಾರ, ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರ ವೇತನ ಮತ್ತು ಇತರೆ ಸೌಲಭ್ಯಗಳು ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾಗಿರಲಿವೆ.
ಅತೀಕ್ ಎಲ್.ಕೆ. ಅವರು ಪ್ರಸ್ತುತ ಬೆಂಗಳೂರು ವ್ಯಾಪಾರ ಕಾರಿಡಾರ್‌ನ ಅಧ್ಯಕ್ಷರಾಗಿದ್ದು, ಆ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಲ್ಲಿ ಅನುಭವಿ ಅಧಿಕಾರಿಗಳ ತಂಡವನ್ನು ರಚಿಸಿರುವುದು ಆಡಳಿತ ವ್ಯವಸ್ಥೆಗೆ ವೇಗ ನೀಡುವ ಪ್ರಯತ್ನವೆಂದು ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.


































































