ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದೆ.
ಮಂಗಳವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ.

ಹಿಟಾಚಿ ಯಂತ್ರದ ಮೂಲಕ ಕಲ್ಲು ತೆಗೆಯುವ ಕಾಮಗಾರಿ ನಡೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕ್ವಾರಿಯಲ್ಲಿ ಬಿಹಾರ ಮೂಲದ 10ರಿಂದ 15 ಕಾರ್ಮಿಕರು ಹಾಗೂ 2ರಿಂದ 3 ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಐವರು ಕಾರ್ಮಿಕರನ್ನು ತಕ್ಷಣವೇ ರಾಮನಗರದ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.





































































