ಮಂಡ್ಯ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಪಡೆಯುವ ನಿರ್ಧಾರವನ್ನು ಬಹಿರಂಗಪಡಿಸಿದರು. ಆದರೆ, ಬೆಂಬಲಿಗರು “ಇನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕು” ಎಂದು ಒತ್ತಾಯಿಸಿದರು.
ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸುದೀರ್ಘವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದರಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
“ನನಗೆ ಈಗ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81-82 ವರ್ಷ ವಯಸ್ಸಾಗಿರುತ್ತದೆ. ಹಿಂದಿನಂತೆ ಆರೋಗ್ಯ ಮತ್ತು ಉತ್ಸಾಹ ಇರುವುದಿಲ್ಲ. 2028ರ ವೇಳೆಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಮಯ ಬಂದಿದೆ” ಎಂದು ಅವರು ಹೇಳಿದ್ದಾರೆ.

1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ ಸಿದ್ದರಾಮಯ್ಯ, ಐದು ದಶಕಗಳ ರಾಜಕೀಯ ಜೀವನದಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ ಎಂಬ ತೃಪ್ತಿ ಇದೆ ಎಂದು ಹೇಳಿದ್ದಾರೆ.
“ಒಂದು ಕಾಲದಲ್ಲಿ ಜನರೇ ಅಭ್ಯರ್ಥಿಗಳಿಗೆ ಹಣ ನೀಡಿ ಗೆಲ್ಲಿಸುತ್ತಿದ್ದರು. ಈಗ ಅಭ್ಯರ್ಥಿಗಳೇ ಮತದಾರರಿಗೆ ಹಣ ನೀಡಬೇಕಾದ ಪರಿಸ್ಥಿತಿ ಬಂದಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲಿಲ್ಲದಂತಾಗಿದೆ. ಇದೇ ಕಾರಣಕ್ಕೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.
ಆದರೆ ಸಕ್ರಿಯ ರಾಜಕೀಯದಿಂದ ದೂರ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ರಾಜ್ಯದ ಜನರ ಸಮಸ್ಯೆಗಳಿಗೆ ಧ್ವನಿಯಾಗಿಯೇ ಮುಂದುವರಿಯುತ್ತೇನೆ. ಐದು ದಶಕಗಳ ಕಾಲ ಪ್ರೀತಿ, ವಿಶ್ವಾಸ ನೀಡಿದ ಜನರ ಋಣ ತೀರಿಸುವ ನಿಟ್ಟಿನಲ್ಲಿ ಉಳಿದ ಜೀವನವನ್ನೂ ಜನಸೇವೆಗೆ ಸಮರ್ಪಿಸುವುದಾಗಿ ಹೇಳಿದ್ದಾರೆ.
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ… pic.twitter.com/v0S4tCQ30o
— Siddaramaiah (@siddaramaiah) July 26, 2026







































































