ಚೆನ್ನೈ: ಕರ್ನಾಟಕದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ತಮಿಳುನಾಡು ಮೂಲದವರು ಮೃತಪಟ್ಟಿರುವ ಘಟನೆಗೆ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿಜಯ್, ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಅಗತ್ಯ ನೆರವು ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆಗಸ್ಟ್ 15ರ ಮುಂಜಾನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಮೃತಪಟ್ಟಿದ್ದರು. ನಾಲ್ಕನೇ ವ್ಯಕ್ತಿ ಮಹಿಮಾ ದಾಸ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಕೂಡ ಘಟನೆ ಖಂಡಿಸಿ, ಕೊಲೆ ಪ್ರಕರಣ ದಾಖಲಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ತಲಾ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ.
ಪಿಎಂಕೆ ಅಧ್ಯಕ್ಷ ಅಂಬುಮಣಿ ರಾಮದಾಸ್ ಸಿಬಿಐ ತನಿಖೆಗೆ ಆಗ್ರಹಿಸಿದ್ದು, ಪ್ರತಿ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವಂತೆ ಹೇಳಿದ್ದಾರೆ. ಸಿಪಿಐ ಮತ್ತು ಸಿಪಿಎಂ ಕೂಡ ಸಂಬಂಧಪಟ್ಟ ಅರಣ್ಯಾಧಿಕಾರಿಗಳನ್ನು ಬಂಧಿಸಿ, ವಜಾಗೊಳಿಸುವಂತೆ ಒತ್ತಾಯಿಸಿವೆ.







































































