ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ ವಶಕ್ಕೆ ಪಡೆದಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಒಎಂಆರ್ ಶೀಟ್‌ಗಳಲ್ಲಿ ಅಂಕ ತಿದ್ದುಪಡಿ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪಗಳ ಕುರಿತು ಸಿಐಡಿ ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿದೆ. ಆಗಸ್ಟ್ 28ರಂದು ಸತತ ಹಲವು ಗಂಟೆಗಳ ಕಾಲ ಜ್ಞಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸಿದ ಅಧಿಕಾರಿಗಳು, ತನಿಖೆಗೆ ಸಮರ್ಪಕವಾಗಿ ಸಹಕರಿಸದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಒಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕುಮಾರ್ ಅವರ ಪಾತ್ರದ ಕುರಿತು ಕೆಲವು ಮಹತ್ವದ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಭ್ಯರ್ಥಿಗಳಿಗೆ ಕೆಲವು ಹೋಟೆಲ್ ಹಾಗೂ ರೆಸಾರ್ಟ್‌ಗಳಲ್ಲಿ ತರಬೇತಿ ನೀಡಿದ ಆರೋಪಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಇಡಿ, ಸಿಐಡಿ ತನಿಖೆ ಚುರುಕು
ಜ್ಞಾನೇಂದ್ರ ಕುಮಾರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಈ ಹಿಂದೆ ಶೋಧ ನಡೆಸಿತ್ತು. ಬಳಿಕ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ನೇಮಕಾತಿಯ ಹಣಕಾಸು ಅಂಶಗಳನ್ನು ಇಡಿ ಪರಿಶೀಲಿಸುತ್ತಿದ್ದರೆ, ಪರೀಕ್ಷಾ ಪ್ರಕ್ರಿಯೆಯಲ್ಲಿನ ಅಕ್ರಮ ಹಾಗೂ ಅಧಿಕಾರಿಗಳ ಪಾತ್ರವನ್ನು ಸಿಐಡಿ ತನಿಖೆ ನಡೆಸುತ್ತಿದೆ.
ಕಳೆದ ಮೂರು ವರ್ಷಗಳಲ್ಲಿ ನಡೆದ ನಾಲ್ಕು ನೇಮಕಾತಿ ಪರೀಕ್ಷೆಗಳ ಬಗ್ಗೆಯೂ ಸಿಐಡಿ ಮಾಹಿತಿ ಸಂಗ್ರಹಿಸಿದೆ. ಪಶುವೈದ್ಯಾಧಿಕಾರಿಗಳ ಜತೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿಯೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಅವರನ್ನೂ ಸಿಐಡಿ ವಿಚಾರಣೆ ನಡೆಸಿದೆ. ಜ್ಞಾನೇಂದ್ರ ಕುಮಾರ್ ಪ್ರಸ್ತುತ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಎಂಎಸ್‌ಎಂಇ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.







































































