ಬೆಂಗಳೂರು: ಶಿವಮೊಗ್ಗದ ದಸರಾ ಮೆರವಣಿಗೆಯಲ್ಲಿ ಅರಣ್ಯ ಇಲಾಖೆಯ ಸೋಮಣ್ಣ ಆನೆ ನಿಯಂತ್ರಣ ತಪ್ಪಿ ಓಡಿದ ಘಟನೆ ಹಿನ್ನೆಲೆಯಲ್ಲಿ, ಧಾರ್ಮಿಕ ಉತ್ಸವಗಳು ಹಾಗೂ ಇತರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಆನೆಗಳ ಬಳಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸಿ ಜಾರಿಗೊಳಿಸುವಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ಈ ಕುರಿತು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್ ಅವರಿಗೆ ನಿರ್ದೇಶನ ನೀಡಿರುವ ಸಚಿವರು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.
ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಸೋಮಣ್ಣ ಆನೆಯು ಅಕ್ಟೋಬರ್ 21ರಂದು ನಡೆದ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತು ಸಾಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ನಿಯಂತ್ರಣ ತಪ್ಪಿ ಓಡತೊಡಗಿತ್ತು. ಇದರಿಂದ ಒಂದು ಕಾರು ಹಾಗೂ ಕೆಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಆನೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿರಲಿಲ್ಲ.

ಧಾರ್ಮಿಕ ಉತ್ಸವಗಳು, ಜಾತ್ರೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಪಾರ ಜನಸಂದಣಿ, ಪಟಾಕಿಗಳ ಸದ್ದು, ವಾದ್ಯಗಳ ಘೋಷ ಮತ್ತು ಇತರ ತೀವ್ರ ಶಬ್ದಗಳಿಂದ ಆನೆಗಳು ಒತ್ತಡಕ್ಕೆ ಒಳಗಾಗಿ ವಿಚಲಿತಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಇಂತಹ ಕಾರ್ಯಕ್ರಮಗಳಲ್ಲಿ ಆನೆಗಳನ್ನು ಬಳಸುವಾಗ ಅವುಗಳ ದೈಹಿಕ ಮತ್ತು ಮಾನಸಿಕ ಸ್ಥಿತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಕಾರ್ಯಕ್ರಮದ ಆಯೋಜಕರು ಕನಿಷ್ಠ ಒಂದು ತಿಂಗಳ ಮುಂಚಿತವಾಗಿ ಸಂಬಂಧಿಸಿದ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಆನೆಗಳಿಗೆ ಕನಿಷ್ಠ 20 ದಿನಗಳ ಪೂರ್ವ ತರಬೇತಿ ನೀಡಬೇಕು. ಆನೆಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸನ್ನದ್ಧವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಜನಸಂದಣಿ, ಗದ್ದಲ ಮತ್ತು ತೀವ್ರ ಶಬ್ದಗಳಿಗೆ ಆನೆಗಳು ಹೊಂದಿಕೊಳ್ಳಬಲ್ಲವು ಎಂಬುದನ್ನು ಪರಿಶೀಲಿಸಿದ ಬಳಿಕವೇ ಅನುಮತಿ ನೀಡಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದ ಸಂದರ್ಭದಲ್ಲಿ ಆನೆಗಳ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಈ ಸಂಬಂಧ ಅರಣ್ಯ ಇಲಾಖೆಯು ಸ್ಪಷ್ಟ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ತುರ್ತಾಗಿ ಹೊರಡಿಸಿ, ಯಾವುದೇ ಬಾಹ್ಯ ಒತ್ತಡಗಳಿಗೆ ಮಣಿಯದೆ ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
















































































