ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಅಂತ್ಯಗೊಳಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಕಂಡುಬರುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಕತಾರ್ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ರಹಮಾನ್ ಅಲ್ ಥಾನಿ ಅವರೊಂದಿಗೆ ಅವರು ಮಹತ್ವದ ಮಾತುಕತೆ ನಡೆಸಿದ್ದಾರೆ.
ಇರಾನ್ ಮೇಲಿನ ಅಮೆರಿಕದ ನೌಕಾ ದಿಗ್ಬಂಧನ ಮುಂದುವರಿಸುವುದಕ್ಕೆ ಕತಾರ್, ಸೌದಿ ಅರೇಬಿಯಾ, ಯುಎಇ, ಬಹ್ರೇನ್ ಮತ್ತು ಕುವೈತ್ ಸೇರಿದಂತೆ ಹಲವು ಪ್ರಾದೇಶಿಕ ರಾಷ್ಟ್ರಗಳು ಬೆಂಬಲ ಸೂಚಿಸಿವೆ. ‘ಆಪರೇಷನ್ ಐರನ್ ಗೇಟ್’ ಮೂಲಕ ಇರಾನ್ಗೆ ಭೂಮಾರ್ಗದ ಪೂರೈಕೆ ತಡೆಯುವ ಕ್ರಮಕ್ಕೂ ಒಲವು ವ್ಯಕ್ತವಾಗಿದೆ.

ಇರಾನ್ ಅಣ್ವಸ್ತ್ರ ಹೊಂದಲು ಅವಕಾಶ ನೀಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರಾಚ್ಯದ ಪರಿಸ್ಥಿತಿ ಬದಲಾದರೆ ಸೇನಾ ಕ್ರಮಕ್ಕೆ ಅಮೆರಿಕ ಸಿದ್ಧವಿದೆ ಎಂದ ಅವರು, ಇರಾನ್ ಮೇಲೆ ಮತ್ತೊಮ್ಮೆ ದಾಳಿ ನಡೆಸುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ. ಇರಾನ್ನ ಸೇನಾ ಸಾಮರ್ಥ್ಯ ಕುಸಿದಿದೆ ಎಂಬುದಾಗಿಯೂ ತಿಳಿಸಿದ್ದಾರೆ.
ಆದರೆ, ಇರಾನ್ ಜೊತೆಗಿನ ರಾಜತಾಂತ್ರಿಕ ಮಾತುಕತೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ ಮತ್ತು ಮಹತ್ವದ ಒಪ್ಪಂದ ಸನಿಹದಲ್ಲಿಲ್ಲ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ. ಹಲವು ದೇಶಗಳು ಇರಾನ್ ಜೊತೆ ವಿವಿಧ ಪ್ರಸ್ತಾಪಗಳ ಕುರಿತು ಮಾತುಕತೆ ನಡೆಸುತ್ತಿವೆ. ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳುವುದೇ ಟ್ರಂಪ್ ಆಡಳಿತದ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.















































































