ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ರಾಜಕೀಯ ಪ್ರೇರಿತ ಭಾಷಣ ಮಾಡಿರುವುದಲ್ಲದೆ, ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ಜ್ಞಾನ ದೇಗುಲಗಳಾಗಿವೆ. ಇಂತಹ ಶೈಕ್ಷಣಿಕ ಆವರಣದಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವುದು ಹಾಗೂ ಮಕ್ಕಳನ್ನು ರಾಜಕೀಯ ಚಟುವಟಿಕೆಗೆ ಬಳಸಿಕೊಂಡಿರುವುದು ಶಿಕ್ಷಣ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾದ ಸಭಾಭವನದ ಉದ್ಘಾಟನೆಗೆ ಶಿಷ್ಟಾಚಾರ ಉಲ್ಲಂಘಿಸಿ ಮುಂದಾಗಿದ್ದನ್ನು ಪ್ರಶ್ನಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು. ಆ ಕಾರ್ಯಕ್ರಮ ರದ್ದಾದ ಬಳಿಕ ಖಾಸಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಶಾಲಾ ವೇದಿಕೆಯನ್ನು ರಾಜಕೀಯ ಭಾಷಣಕ್ಕೆ ಬಳಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಅಲ್ಲದೆ, ಮಕ್ಕಳಿಂದ ರಾಜಕೀಯ ನಾಯಕರ ಪರವಾಗಿ ಜಯಕಾರ ಹಾಕಿಸಿರುವುದು ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಮಕ್ಕಳ ಮನಸ್ಸಿನ ಮೇಲೆ ರಾಜಕೀಯ ಪ್ರಭಾವ ಬೀರುವ ಇಂತಹ ಘಟನೆಗಳ ಕುರಿತು ಶಿಕ್ಷಣ ಇಲಾಖೆ ತಕ್ಷಣ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.














































































