ಬೆಂಗಳೂರು: ಕನ್ನಡ ಚಿತ್ರರಂಗದ ‘ಯುವರತ್ನ‘ ಇನ್ನು ನೆನಪು ಮಾತ್ರ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದು ಮಣ್ಣಲ್ಲಿ ಮಣ್ಣಾಗಿ ‘ಪೃಥ್ವಿ’ಯ ಮಡಿಲು ಸೇರಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ನಾಯಕರನೇಕರು ಉಪಸ್ಥಿತರಿದ್ದು ಅಂತಿಮ ನಮನ ಸಲ್ಲಿಸಿದರು.
ಸಹೋದರ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸಹಿತ ಡಾ.ರಾಜ್ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದೀಪ್, ಯಶ್, ಸಾಧುಕೋಕಿಲಾ, ವಿಜಯ ರಾಘವೇಂದ್ರ, ರಾಕ್ಲೈನ್ ವೆಂಕಟೇಶ್ ಸಹಿತ ಕನ್ನಡ ಚಿತ್ರರಂಗದ ನಟ-ನಟಿಯರು ದೊಡ್ಮನೆ ಹುಡುಗನಿಗೆ ಅಂತಿಮ ನಮನ ಸಲ್ಲಿಸಿದರು.