ಬೆಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, “ಅಂತ್ಯೋದಯ” – ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರುಗಳಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಅ.4ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಂಟ್ವಾಳದ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮ ಕುರಿತು ವಿವರ ನೀಡಿದ ಸಚಿವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಈಗಾಗಲೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಕಾರ್ಯಕ್ರಮಕ್ಕೆ ಶುಭಾಶಂಸನೆಗೈಯಲಿದ್ದು, ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ಸಚಿವರಾದ ಎ.ನಾರಾಯಣ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಎಸ್. ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ರಾಜೇಶ್ ನಾಯ್ಕ ಯು, ಅಧ್ಯಕ್ಷತೆ ವಹಿಸುವರು ಎಂದವರು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲೆಯ ಎಲ್ಲಾ ವಿಧಾನಸಭಾ ಮತ್ತು ವಿಧಾನ ಪರಿಷತ್‌ನ ಮಾನ್ಯ ಶಾಸಕರುಗಳು, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರುಗಳು ಹಾಗೂ ತುಂಬೆ ಗ್ರಾಮ ಪಂಚಾಯಿತಿನ ಮಾನ್ಯ ಅಧ್ಯಕ್ಷರು ಭಾಗವಹಿಸಲಿದ್ದು, ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳು ಹಾಜರಿರುವರು ಎಂದು ಸಚಿವರು ಮಾಹಿತಿ ಒದಗಿಸಿದರು.
ಬೆಳಗಿನ ಅವಧಿಯಲ್ಲಿ ಸಭಾ ಕಾರ್ಯಕ್ರಮವಿದ್ದು, ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರುಗಳಿಗೆ ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಮಧ್ಯಾಹ್ನದ ಅವಧಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸುವಂತೆ ಸಚಿವರು ಕೋರಿದರು.