ಬೆಂಗಳೂರು: ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ AIUTUC ಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲ ಪ್ರಕಟಿಸಿದೆ.
‘TIME-TO-TIME’ ನಲ್ಲಿ ಆಶಾ ಕಾರ್ಯಕರ್ತೆಯರ ಮತ್ತಷ್ಟು ಸುದ್ದಿಗಳು
ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಹಗಲು-ರಾತ್ರಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ 11.03.2026 ರಿಂದ ಘೋಷಿಸಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ರಿ) ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ತಿಳಿಸಿದ್ದಾರೆ.
ವರ್ಷಗಳಿಂದ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳು ಅನೇಕ ಆಡಳಿತಾತ್ಮಕ ಸಮಸ್ಯೆಗಳು, ಕೆಲಸದ ಒತ್ತಡ, ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಸೇವಾ ಅಸಮಾನತೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಸರ್ಕಾರ ಹಲವಾರು ಬಾರಿ ಗಮನಕ್ಕೆ ತಂದರೂ ಸಮರ್ಪಕ ಪರಿಹಾರ ನೀಡದಿರುವುದು ಅತ್ಯಂತ ವಿಷಾದನೀಯ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕ ಆರೋಗ್ಯ ಸೇವೆಯ ಬೆನ್ನೆಲುಬಾಗಿರುವ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವುದು ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸವಾಗುತ್ತದೆ. ಸರ್ಕಾರ ತಕ್ಷಣ ಸಂವಾದ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಶಾ ಕಾರ್ಯಕರ್ತೆಯರ ಸಂಘದ ಆಗ್ರಹವಾಗಿದೆ ಎಂದವರು ತಿಳಿಸಿದ್ದಾರೆ.
ಆರೋಗ್ಯ ಸೇವೆಯ ಗುಣಮಟ್ಟವನ್ನು ಕಾಪಾಡಲು ಹಾಗೂ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದ್ದು, ಅವರ ಈ ಹೋರಾಟಕ್ಕೆ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಸಹ ಹೃದಯಪೂರ್ವಕ ಬೆಂಬಲ ನೀಡುತ್ತಾರೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿರುವ ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮಿ, ರಾಜ್ಯ ಸರ್ಕಾರವು ಇವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರದಲ್ಲಿ ಪರಿಗಣಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.






















































