ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್-2026 ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಅಥವಾ ಅವರ ಕಲ್ಯಾಣಕ್ಕೆ ಸಂಬಂಧಿಸಿದ ಯಾವುದೇ ಘೋಷಣೆ ಇಲ್ಲ. ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರಲ್ಲಿ ಭಾರೀ ನಿರಾಶೆ ಮತ್ತು ಆಕ್ರೋಶ ಉಂಟು ಮಾಡಿದೆ. ಕಳೆದ ಮೂರು ವರ್ಷಗಳಿಂದ ಆಶಾ ಕಾರ್ಯಕರ್ತರಿಗೆ ಸುಳ್ಳು ಭರವಸೆ ನೀಡಿ ಬಜೆಟ್ ನಲ್ಲಿ ಯಾವುದೇ ರೀತಿಯಲ್ಲಿ ಗೌರವಧನ ಹೆಚ್ಚಳ ಮಾಡದೆ ಬಡ ಹೆಣ್ಣು ಮಕ್ಕಳಿಗೆ ಮೋಸ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ಆಕ್ರೋಶ ಹೊರಹಾಕಿದೆ.
ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಹಲವು ವರ್ಷಗಳಿಂದ ತಮ್ಮ ನ್ಯಾಯಸಮ್ಮತ ಬೇಡಿಕೆಗಳಾದ ಗೌರವಧನ ಹೆಚ್ಚಳ, ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತಾ ಸೌಲಭ್ಯಗಳು ಸೇರಿದಂತೆ ಅನೇಕ ಪ್ರಮುಖ ಬೇಡಿಕೆಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಅನೇಕ ಬಾರಿ ಸರ್ಕಾರದ ಗಮನಕ್ಕೆ ಈ ಸಮಸ್ಯೆಗಳನ್ನು ತಂದಿದ್ದರೂ, ಇಂದಿನ ಬಜೆಟ್ನಲ್ಲಿ ಅವುಗಳಿಗೆ ಯಾವುದೇ ರೀತಿಯ ಸ್ಪಂದನೆ ದೊರಕದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಅವ್ರು ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
‘ತರ್ಕಬದ್ಧಗೊಳಿಸುವಿಕೆ’ ಎಂಬ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈಬಿಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬ ಮಾಹಿತಿ ಕೂಡ ಅತ್ಯಂತ ಆತಂಕಕಾರಿಯಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಈ ರೀತಿಯಾಗಿ ಹೊರತುಪಡಿಸುವ ಪ್ರಯತ್ನವನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದವರು ತಿಳಿಸಿದ್ದಾರೆ.
ಗ್ರಾಮಗಳಿಂದ ನಗರಗಳವರೆಗೆ ತಾಯಿ-ಮಗು ಆರೋಗ್ಯ ಸೇವೆಗಳು, ಲಸಿಕೆ ಕಾರ್ಯಕ್ರಮಗಳು, ಆರೋಗ್ಯ ಜಾಗೃತಿ ಅಭಿಯಾನಗಳು ಸೇರಿದಂತೆ ಹಲವಾರು ಪ್ರಮುಖ ಆರೋಗ್ಯ ಸೇವೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಆಶಾ ಕಾರ್ಯಕರ್ತೆಯರು ಅತ್ಯಂತ ಸಮರ್ಪಿತವಾಗಿ ನಿರ್ವಹಿಸುತ್ತಿದ್ದಾರೆ. ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜನಸೇವೆಯಲ್ಲಿ ತೊಡಗಿದ್ದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ನಿರ್ಲಕ್ಷಿಸಬಾರದು ಎಂದವರು ಹೇಳಿದ್ದಾರೆ.
ರಾಜ್ಯ ಸರ್ಕಾರ ತಕ್ಷಣವೇ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸಿ, ಗೌರವಧನದಲ್ಲಿ ಗಣನೀಯ ಹೆಚ್ಚಳ ಮಾಡಬೇಕು, ಆಶಾ ಕಾರ್ಯಕರ್ತೆಯರಿಗೆ ಉದ್ಯೋಗ ಭದ್ರತೆ ಒದಗಿಸಬೇಕು, ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ನೀಡಬೇಕು, ‘ತರ್ಕಬದ್ಧಗೊಳಿಸುವಿಕೆ’ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈಬಿಡುವ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು ಎಂದವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸರ್ಕಾರ ಈ ಬೇಡಿಕೆಗಳನ್ನು ತಕ್ಷಣ ಪರಿಗಣಿಸಿ ಕ್ರಮ ಕೈಗೊಳ್ಳದಿದ್ದರೆ, ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಇನ್ನಷ್ಟು ತೀವ್ರವಾದ ಹೋರಾಟವನ್ನು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.






















































