ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಬಳಿ ನಡೆದಿದೆ.
ಗುರುವಾರ ಮಧ್ಯಾಹ್ನ ಲಕ್ಷ್ಮಿದೇವಿನಗರ ವಾರ್ಡ್ನಲ್ಲಿ ಬಿಜೆಪಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುನಿರತ್ನ ಅವರು ತೆರಳುತ್ತಿದ್ದಾಗ ಅಪರಿಚಿತರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.
ಈ ಘಟನೆಯಿಂದಾಗಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ನಡುವೆ, ಮುನಿರತ್ನ ಮೇಲೆ ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದಾರೆ ಎನ್ನಲಾಗಿದೆ.