ಬೆಂಗಳೂರು: ಕೃಷ್ಣರಾಜಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ 115 ಬಡ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿಗಳ ಚೆಕ್ ಅನ್ನು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಹಲವು ಸಚಿವ ಸಮ್ಮುಖದಲ್ಲಿ ವಿತರಿಸಿದರು.
ಕೆ.ಅರ್. ಪುರ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ಅವರು ಕ್ಷೇತ್ರದ ಜನರಿಂದ ನಾನು ಶಾಸಕನಾಗಿ ಅಯ್ಕೆ ಅಗಿದ್ದೇನೆ, ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.
ಕೋವಿಡ್ ಸಂಕಷ್ಟದ ದಿನಗಳಲ್ಲಿ ಕೆಲ ದಿನಗಳ ಹಿಂದೆ ಕ್ಷೇತ್ರದ ಬಡ ಕುಟುಂಬದವರಿಗೆ ಒಂದು ಲಕ್ಷಕ್ಕೂ ಹೆಚ್ಚು ಆಹಾರ ಪದಾರ್ಥಗಳ ಕಿಟ್ ವಿತರಿಸಿದ್ದೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಈಗಾಗಲೇ ಕೋವಿಡ್ ನಿಂದ ಮೃತಪಟ್ಟ ಬಿ ಪಿ ಎಲ್ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿ ನೀಡುವ ಆದೇಶ ಮಾಡಿದೆ. ಈಗಾಗಲೇ ಕೆ. ಅರ್. ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೃತಪಟ್ಟ 435 ಕುಟುಂಬದವರಿಗೆ ಮಾನ್ಯ ಮುಖ್ಯಮಂತ್ರಿಗಳ ಮೂಲಕ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಬಸವರಾಜ ಅವರು ಹೇಳಿದರು.
ಕೊರೊನಾ ಸೋಂಕಿನಿಂದ ಮೃತಪಟ್ಟ ನಂತರ ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲು ಬಹಳಷ್ಟು ಕುಟುಂಬದ ಸದಸ್ಯರು ಮುಂದೆ ಬರಲಿಲ್ಲ. ಅಂತಹ ಮೃತದೇಹದ ಅಸ್ಥಿ ಗಳನ್ನು ಸರ್ಕಾರದ ವತಿಯಿಂದ ವಿಧಿವಿಧಾನಗಳ ಮೂಲಕ ಕಾವೇರಿ ನದಿ ತೀರದಲ್ಲಿ ವಿಸರ್ಜನೆ ಮಾಡಲಾಯಿತು ಎಂದು ಕಂದಾಯ ಸಚಿವರಾದ ಅರ್. ಅಶೋಕ ಹೇಳಿದರು.
ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ, ಬಿಬಿಎಂಪಿ ಮಾಜಿ ಸದಸ್ಯರಾದ ಜಯಪ್ರಕಾಶ್, ಅಂತೋಣಿಸ್ವಾಮಿ, ಶ್ರೀಕಾಂತ್, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.