ಗದಗ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಶ್ರೀಗಳ ಆಶಯದಂತೆ ಜಾತ್ರೆಯನ್ನು ಸರಳವಾಗಿ ಆಚರಿಸಲಾಗುವುದು. ಬಳಗಾನೂರ ಜಾತ್ರೆಯು ಈ ಭಾಗದಲ್ಲಿ ಅತ್ಯಂತ ಮಹತ್ವಪೂರ್ಣವಾಗಿದ್ದು ಶ್ರೀಮಠವು ಅಪಾರ ಭಕ್ತರು ಹಾಗೂ ಅಭಿಮಾನಿಗಳನ್ನು ಒಳಗೊಂಡಿದೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯದ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ಗದಗ್ ನಗರದ ಪ್ರವಾಸಿ ಮಂದಿರದಲ್ಲಿ ಬಳಗಾನೂರ ಜಾತ್ರೆಗೆ ಸಂಬಂಧಿಸಿದಂತೆ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ಜಾತ್ರೆಗೆ ಆಗಮಿಸುವ ಜನಸಾಮಾನ್ಯರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಸಕಾಲದಲ್ಲಿ ಒದಗಿಸುವಂತೆ ವಿಭಾಗೀಯ ನಿಯಂತ್ರಣಾದಿಕಾರಿ ಎಫ್.ಸಿ. ಹಿರೇಮಠ ಅವರಿಗೆ ಸೂಚಿಸಿದರು. ಜಾತ್ರೆಯ ಸಂದರ್ಭದಲ್ಲಿ ವಿದ್ಯುತ್ ಕಡಿತ ಸಮಸ್ಯೆಯಾಗದಂತೆ ನಿಗಾ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಜಾಗೃತಿಯನ್ನು ಮೂಡಿಸಬೇಕು. ಅಲ್ಲದೇ ಸಾಂಕ್ರಾಮಿಕ ರೋಗ ತಡೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಹಾಗೂ ಸ್ಥಳೀಯ ಆಡಳಿತಗಳು ಸರಿಯಾಗಿ ಮಾಡಬೇಕು. ಜಾತ್ರೆಯಲ್ಲಿ ಜೂಜಾಟ , ಇಸ್ಪೀಟ್ ಆಡದಂತೆ ಪೊಲೀಸ ಇಲಾಖೆಯು ಸೂಕ್ತ ಕ್ರಮ ವಹಿಸುವುದರೊಂದಿಗೆ ಉತ್ತಮ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸಚಿವರು ತಿಳಿಸಿದರು. ಸ್ಥಳೀಯ ಗ್ರಾಮ ಪಂಚಾಯತಿಯಿಂದ ಆಗಮಿಸುವ ಭಕ್ತಾದಿಗಳಿಗೆ ಆರೋಗ್ಯ ದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಬೆಕು. ಈ ಬಗ್ಗೆ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಸ್ತುವಾರಿ ವಹಿಸಬೇಕೆಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.
ಸಭೆಯಲ್ಲಿ ಡಿ.ಸಿ.ಪಿ. ಪ್ರಹ್ಲಾದ್‍ರಾವ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಿನಗಾ, ತಾಲೂಕಾ ಆರೋಗ್ಯಾದಿಕಾರಿ ಡಾ.ಎಸ್.ಎಸ್.ನೀಲಗುಂದ, ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ.ಹಿರೇಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು..