ಬೆಂಗಳೂರು: ಭಾರತೀಯ ಜನತಾ ಪಕ್ಷ ಇಂದು ಗಣರಾಜ್ಯೋತ್ಸವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿತು. ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕ ಮುನಿರತ್ನ, ವಿಧಾನ ಪರಿಷತ್ ಸದಸ್ಯ ಭಾರತಿ ಶೆಟ್ಟಿ, ರಾಜ್ಯ ಬಿಜೆಪಿ ಪದಾಧಿಕಾರಿಗಳಾದ ಸಿದ್ದರಾಜು, ರಾಜ್ಯ ಉಪಾಧ್ಯಕ್ಷರಾದ ಶಂಕರಪ್ಪ, ಜಗದೀಶ ಹಿರೇಮನಿ, ಚಲವಾದಿ ನಾರಾಯಣಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ, ನಾರಾಯಣಗೌಡ ಮೊದಲಾದ ಗಣ್ಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, 2014ಕ್ಕಿಂತ ಮೊದಲಿದ್ದ ಭಾರತಕ್ಕೂ ಅನಂತರದ ಭಾರತಕ್ಕೂ ಅಭಿವೃದ್ಧಿ ವಿಚಾರದಲ್ಲಿ ಅಜಗಜಾಂತರ ವ್ಯತ್ಯಾಸವಾಗಿದೆ. ಜನಪರ ಮತ್ತು ಅಭಿವೃದ್ಧಿಪರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ನಮ್ಮ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದೆ ಎಂದು ಅಭಿಪ್ರಾಯಪಟ್ಟರು.
370 ವಿಧಿ, ತ್ರಿವಳಿ ತಲಾಖ್ ಹಾಗೂ ಬೇಟಿ ಬಚಾವೊ ಸೇರಿದಂತೆ ಅನೇಕ ಸಾಮಾಜಿಕ ಬದಲಾವಣೆಗಳಿಗೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕೋವಿಡ್ ಸೇರಿದಂತೆ ಹತ್ತಾರು ಸವಾಲುಗಳ ನಡುವೆಯೂ ದೇಶವು ವಿಶ್ವಗುರುವಾಗುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದರು.