ಬೆಂಗಳೂರು: ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.
ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೇವಲ ಮೂರು ತಿಂಗಳ ಕಾಲದಲ್ಲಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಈ ಐಸಿಯು, ಈ ಮೂಲಕ ಇಂದಿನಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು, ದಾನಿಗಳ ನೆರವಿನಿಂದ ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡ್ಯೂಲರ್ ಐಸಿಯು ಸ್ಥಾಪಿಸಿರುವುದು ಶ್ಲಾಘನೀಯ. ಇದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಯದೇವ ಹೃದ್ರೋಗ ಆಸ್ಪತ್ರೆ ವತಿಯಿಂದ 50 ಹಾಸಿಗೆಯ ಕ್ಯಾಥ್ ಲ್ಯಾಬ್ ಸ್ಥಾಪನೆ ಹಾಗೂ 50 ಹಾಸಿಗೆಯ ಟ್ರಾಮಾ ಕೇರ್ ಸೆಂಟರ್ ಹಾಗೂ 150 ಹಾಸಿಗೆಯ ತಾಯಿ- ಮಗು ಚಿಕಿತ್ಸಾ ಕೇಂದ್ರವನ್ನು ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.
ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಎಲ್ಲ ಸೌಲಭ್ಯಗಳನ್ನು ಒದಗಿಸುವ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಮುಖ್ಯಮಂತ್ರಿ ಒಪ್ಪಿದರು.
2,100ಕ್ಕೂ ಅಧಿಕ ಕೋವಿಡ್ ರೋಗಿಗಳಿಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದ ಸಿಎಂ ಅವರು, ಕೋವಿಡ್ ಲಸಿಕೆ ಅಭಿಯಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಈಚೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿಗಳು ಕೂಡ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯವು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೊಗಳಿದ್ದರು. ಈ ನಿಟ್ಟಿನಲ್ಲಿ ಇಲಾಖೆಗೆ ಹೆಚ್ಚೆಚ್ಚು ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧವಿದೆ ಎಂದರು ಸಿಎಂ.
ಪ್ರಾಸ್ತಾವಿಕ ಭಾಷಣ ಮಾಡಿದ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು; ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾಡ್ಯೂಲರ್ ಐಸಿಯುಗಳ ಅತ್ಯಂತ ಸಹಕಾರಿ. 100 ಹಾಸಿಗೆಗಳು ಇಲ್ಲಿ ಲಭ್ಯವಿದ್ದು, ದಾನಿಗಳ ನೆರವಿನಿಂದ ನಿರ್ಮಾಣ ಮಾಡಲಾಗಿದೆ. ಎಂಥಹುದೇ ಪರಿಸ್ಥಿತಿಯಲ್ಲೂ ಇವುಗಳನ್ನು ಬಳಸಬಹುದಾಗಿದ್ದು, ರಾಜ್ಯದ ಆವಿಷ್ಕಾರ ಕುಶಲತೆಗೆ ಕನ್ನಡಿಯಾಗಿದೆ ಎಂದರು.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿನ ಟ್ರಾಮಾ ಕೇರ್ ಸೆಂಟರನ್ನೇ ಅಕಾಡೆಮಿಕ್ ಕ್ರಿಟಿಕಲ್ ಕೇರ್ ಸೆಂಟರ್ ಆಗಿ ಮಾಡುವುದರಿಂದ ತಜ್ಞ ಸಿಬ್ಬಂದಿಯ ಕೊರತೆ ನೀಗಿಸಬಹುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

























































