ಬೆಂಗಳೂರು: ರಾಜಧಾನಿ ಬೆಂಗಳೂರಿನಾದ್ಯಂತ ಪ್ರಮುಖ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಸಂಗ್ರಹಿಸಲು ಮತ್ತು ಸಂಚಾರ ಶಿಸ್ತನ್ನು ತರುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಪಾರ್ಕಿಂಗ್ ನೀತಿಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯ ಬಳಿಕ ಮಾಧ್ಯಮಗಳಿಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಈ ವಿಷಯ ತಿಳಿಸಿದರು.
ಪಾರ್ಕಿಂಗ್ ಶುಲ್ಕವನ್ನು ಯಾವ ರೀತಿ ಸಂಗ್ರಹಿಸಬೇಕು ಮತ್ತು ಇನ್ನಿತರೆ ಮಾನದಂಡಗಳು ಹಾಗೂ ಮಾರ್ಗಸೂಚಿ ತಯಾರಿಸಿ ಕರಡು ನೀತಿಯನ್ನು ಸಿದ್ಧಪಡಿಸಲು ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ತಿಳಿಸಿದರು.
ನಗರದಲ್ಲಿ ಪ್ರಸ್ತುತ 80-85 ಸ್ಥಳಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ನಗರದ ಎಲ್ಲಾ ಕಡೆ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಮತ್ತು ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಪಾರ್ಕಿಂಗ್ ಶುಲ್ಕ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದರು.
ನಗರದಲ್ಲಿನ ಸಮನಚಾರ ದಟ್ಟಣೆಯನ್ನು ಕಡಿಮೆ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಕಠಿಣ ಕ್ರಮ ಜರುಗಿಸುವುದೂ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು.
ಮುಖ್ಯ ಕಾರ್ಯದರ್ಶಿಗಳು ಅಧ್ಯಯನ ನಡೆಸಿ ಸರ್ಕಾರಕ್ಕೆ ಕರಡು ಸಲ್ಲಿಸಲಿದ್ದಾರೆ. ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿಗೆ ತರುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ್, ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳು ಹಾಜರಿದ್ದರು.