ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರುದ್ಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.
ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರದ ವಿರುದ್ದವೂ ಸಿಟ್ಟು ವ್ಯಕ್ತ ಪಡಿಸಿದ ಪ್ರತಿಭಟನಾಕಾರರು, ಇಲ್ಲಿ ಮರಾಠಿ ಅಭಿವೃದ್ಧಿ ನಿಗಮ ಮಾಡ್ತಾರೆ, ಅಲ್ಲಿ ಬೆಳಗಾವಿ ನಮಗೆ ಸೇರಿದ್ದು ಎಂದು ಮರಾಠಿಗರು ಹೇಳುತ್ತಾರೆ. ಹಾಗಾದರೆ ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಸಿಟ್ಟು ಹೊರಹಾಕಿದ್ದಾರೆ.