ಬಳ್ಳಾರಿ: ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು. ಆ ಮೂಲಕ ಅಭಿವೃದ್ಧಿಗೆ ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮನವಿ ಪಕ್ಷದ ಕಾರ್ಯಕರ್ತರಿಗೆ ಕರೆನೀಡಿದ್ದಾರೆ.
ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಇಡೀ ಸಮುದಾಯಕ್ಕೆ ನಾನು ಒಂದೇ ಒಂದು ಮನವಿ ಮಾಡಿಕೊಳ್ಳುತ್ತೇನೆ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಕ್ಷೇತ್ರಗಳಿವೆ. ಆದರೆ ನಾವು ಗೆದ್ದಿದ್ದು ಕೇವಲ ಐದು ಸ್ಥಾನ. ಆದರೆ ಬರುವ ಚುನಾವಣೆಯಲ್ಲಿ ಹತ್ತಕ್ಕೆ ಹತ್ತೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಬೇಕು ಎಂದು ಜನರನ್ನು ವಿನಂತಿಸಿದರು.
ಎಸ್ಟಿ ಸಮುದಾಯದ ಅನೇಕ ವರ್ಷಗಳ ಹೋರಾಟ, ಬೇಡಿಕೆಯಾಗಿದ್ದ ಮೀಸಲಾತಿ ಹೆಚ್ಚಿಸಿದ್ದು ಮಾತ್ರ ಬಿಜೆಪಿ ಸರ್ಕಾರ. ವಾಲ್ಮೀಕಿ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ, ಜಯಂತಿ, ಜಯಂತಿಗಾಗಿ ರಜೆ ಘೋಷಣೆ ಮಾಡಿದ್ದು ನಮ್ಮ ಸರ್ಕಾರ. ಸಣ್ಣ ಕೈಗಾರಿಕೆಗಳಿಗೆ ಶೇ. 50ರಷ್ಟು ಸಬ್ಸಿಡಿ ಸಿಗುತ್ತಿದೆ. ಈ ಹಿಂದೆ ನಾನು ಸಿಎಂ ಆಗಿದ್ದಾಗ ಶ್ರೀರಾಮುಲು ಮತ್ತು ಜನಾರ್ಧನರೆಡ್ಡಿ ಅವರು ಕೇಳಿದ ಪ್ರತಿಯೊಂದು ಕೆಲಸವನ್ನೂ ಮಾಡಿದ್ದೇನೆ. ಅದು ನಿಮಗೆಲ್ಲ ತಿಳಿದಿದೆ. ಹೀಗಾಗಿ ನಮ್ಮ ಅಭ್ಯರ್ಥಿಗಳನ್ನು ಎಲ್ಲಾ ಕ್ಷೆತ್ರಗಳಲ್ಲಿ ಗೆಲ್ಲಿಸಬೇಕು ಎಂದು ತಿಳಿಸಿದರು.
ಈ ಸಮಾವೇಶ ನೋಡಿ ಕಾಂಗ್ರೆಸ್ ನವರಿಗೆ ಆಘಾತವಾಗಿದೆ. ಕಾಂಗ್ರೆಸ್ ನವರು ಅಧಿಕಾರದಲ್ಲಿ ಇದ್ದಾಗ ಬರೀ ಲೂಟಿ ಮಾಡಿದರು. ಇದನ್ನೇ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೂರು ತಲೆಮಾರಿಗಾಗುಷ್ಟು ಹಣ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ. ಬಿಜೆಪಿ ಅಂದರೆ ಅಭಿವೃದ್ಧಿ ಪರ ಪಕ್ಷ. ಕಾಂಗ್ರೆಸ್ ಎಂದರೆ ಲೂಟಿಕೋರ ಪಕ್ಷವಾಗಿದೆ.
ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಮಾತನಾಡಿ, ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯಕ್ಕಾಗಿ ಹಾಗೂ ಎಸ್ಸಿ ಸಮುದಾಯಗಳಿಗೆ ರಾಜ್ಯದ ಸಿಎಂ ಬೊಮ್ಮಾಯಿ ಅವರು ಮೀಸಲಾತಿ ಹೆಚ್ಚಿಸಿದ್ದಾರೆ. ಅವರಿಗೆ ನಮ್ಮ ಸಮುದಾಯಗಳು ಋಣಿಯಾಗಿರಬೇಕು. ಮೋದಿ ಹಾಗೂ ಬೊಮ್ಮಾಯಿ ಅವರ ನೃತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಕಾರ್ಯ ಮಾಡುತ್ತಿವೆ. ರಾಮುಲು ಅವರು ಹೇಳಿದ ಎಲ್ಲಾ ಮಾತುಗಳನ್ನು ನಾನು ಒಪ್ಪಿ ಅವರನ್ನು ಬೆಂಬಲಿಸುತ್ತೇನೆ. ಭಗವಾನ್ ಬಿರ್ಸ ಮುಂಡಾ ಅವರ ಜಯಂತಿಯ ಸುಸಂದರ್ಭದಲ್ಲಿ ಆದಿವಾಸಿಗಳಿಗೆ ಮೀಸಲಾತಿ ಹೆಚ್ಚಿಸಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು.






































































