ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಬಳಿ ಸಿಡಿಮದ್ದು ಘಟಕದಲ್ಲಿ ಸ್ಫೋಟ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಈ ಪಟಾಕಿ ಘಟಕಕ್ಕೆ ಸಮರ್ಪಕ ಅನುಮತಿ ಪಡೆಯಲಾಗಿತ್ತೆಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಈ ಸ್ಫೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಪಟಾಕಿ ತಯಾರಿ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ಬಶೀರ್ ಎಂಬವರ ಜಮೀನಿನಲ್ಲಿದ್ದ ಪಟಾಕಿ ತಯಾರಿಕಾ ಘಟಕದಲ್ಲಿ 9 ಮಂದಿ ಕಾರ್ಮಿಕರು ಕೆಲಸದಲ್ಲಿದ್ದರು ಎನ್ನಲಾಗಿದ್ದು ಭಾನುವಾರ ಸಂಜೆ ಈ ಘಟನೆ ನಡೆದಿದೆ. ದುರಂತದಲ್ಲಿ ಮೃತಪಟ್ಟವರನ್ನು ಹಾಸನ ಮೂಲದ ಚೇತನ್, ಕೇರಳ ಮೂಲದ ವರ್ಗೀಸ್ ಹಾಗೂ ಸ್ವಾಮಿ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ. ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾಗಿದ್ದು, ಇದರ ಸದ್ದು 4 ಕಿ.ಮೀ. ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿರುವ ವೇಣೂರು ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
























































