ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಸಮಾರ ಸಾರಿದ್ದು ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಹಿಳೆಯರು ನಡೆಸಿದ ಪ್ರತಿಭಟನೆ ಗಮನಸೆಳೆಯಿತು.
ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ಕೃತ್ಯಗಳನ್ನು ಖಂಡಿಸಿ ಮಹಿಳಾ ಮೋರ್ಚಾ ವತಿಯಿಂದ ಈ ಪ್ರತಿಭಟನೆ ನಡೆದಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳಾ ಮೋರ್ಚಾ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ ಅವರ ಸರ್ಕಾರ ಮಹಿಳಾ ವಿರೋಧಿ ಸರ್ಕಾರ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಗೀತಾ ವಿವೇಕಾನಂದ ಸಹಿತ ಅನೇಕ ಕಾರ್ಯಕರ್ತೆಯರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರದ ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಪ್ರಸಂಗವೂ ನಡೆಯಿತು. ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಸಹಿತ ಬಿಜೆಪಿ ನಾಯಕರೂ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.