ಬೆಂಗಳೂರು: ಹೈದರಾಬಾದ್ನಲ್ಲಿ ನವೆಂಬರ್ 14ರಂದು ನಡೆಯಲಿರುವ ‘ಭಾರತ್ ಶೃಂಗಸಭೆ-2026’ರಲ್ಲಿ ಭಾಗವಹಿಸುವಂತೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕರಿಗೆ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಆಹ್ವಾನ ನೀಡಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಸಚಿವರನ್ನು ಭೇಟಿಯಾದ ಅವರು, ಶೃಂಗಸಭೆಯ ಉದ್ದೇಶ ಮತ್ತು ಕಾರ್ಯಸೂಚಿ ಕುರಿತು ಚರ್ಚಿಸಿದರು.
ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಕೆ.ಎಸ್. ಬಸವಂತಪ್ಪ ಉಪಸ್ಥಿತರಿದ್ದರು. ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ. ಸುಧೀಂದ್ರ ಕೂಡ ಭಾಗವಹಿಸಿದ್ದರು.

ಶೃಂಗಸಭೆಯ ವಿವಿಧ ಅಧಿವೇಶನಗಳಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕದ ನಾಯಕರಿಗೆ ನಿಯೋಗ ಆಹ್ವಾನ ನೀಡಿತು. ಹೈದರಾಬಾದ್ನ HITEX ಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಈ ಶೃಂಗಸಭೆಯಲ್ಲಿ ಸುಮಾರು 70 ದೇಶಗಳ 1,000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರಜಾಪ್ರಭುತ್ವ ಸಂಸ್ಥೆಗಳು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯ, ಉದಯೋನ್ಮುಖ ತಂತ್ರಜ್ಞಾನಗಳು ಹಾಗೂ ಜಾಗತಿಕ ಸಹಕಾರದ ಕುರಿತು ಚರ್ಚೆಗಳು ನಡೆಯಲಿವೆ.
ನವೆಂಬರ್ 14ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















































































