ಚಾಮರಾಜನಗರ: ಎಐಸಿಸಿ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸಲಿದೆ. ಈ ಕಾರ್ಯಕ್ರಮಕ್ಕೆ ಪ್ರದೇಶ ಕಾಂಗ್ರೆಸ್ ವತಿಯಿಂದ ಭರದ ಸಿದ್ದತೆ ಸಾಗಿದೆ.
ರಾಹುಲ್ ಗಾಂಧಿಯವರ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಳೇ ಮೈಸೂರು ಭಾಗದ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಗುಂಡ್ಲುಪೇಟೆಯಿಂದ ಮೈಸೂರುವರೆಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸಾಗುವ ಮಾರ್ಗ ಹಾಗೂ ವಾಸ್ತವ್ಯ ಸ್ಥಳದ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ಅವರು. ಚಾಮರಾಜನಗರ ಜಿಲ್ಲಾ ಎಸ್ಪಿ ಶಿವಕುಮಾರ್ ಹಾಗೂ ಇತರ ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಮೊದಲಾದ ಮುಖಂಡರು ಸಿದ್ದರಾಮಯ್ಯರ ಜೊತೆಗಿದ್ದರು.
























































