ಬೆಂಗಳೂರು: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು.
ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ ಎಂದರು.