ಬೆಂಗಳೂರು: ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆಗೆ ಭಾರೀ ಮಹತ್ವ ಬಂದಿದೆ.
ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಹಿತ ಪ್ರಮುಖರನೇಕರು ಭಾಗವಹಿಸಿದ್ದರು.
ಮುಂಬರುವ ವಿಧಾನಸಭಾ ಚುನಾವಣೆಗೆ ನಡೆಯಬೇಕಾದ ತಯಾರಿ ಹಾಗೂ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜಾಗಬೇಕಿದೆ. ಇಂತಹಾ ಸಂದರ್ಭಗಳಲ್ಲಿ ಈ ಬಾರಿಯ ಮೇಲ್ಮನೆ ಚುನಾವಣೆಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ ಅಭ್ಯರ್ಥಿಗಳ ಆಯ್ಕೆ ಸಹಿತ ಪ್ರಮುಖ ವಿಚಾರಗಳನ್ನು ಈ ಕೋರ್ ಕಮಿಟಿ ಸಭೆಯಲ್ಲಿ ಇಡಲಾಗಿತ್ತು. ಆಕಾಂಕ್ಷಿಗಳು ಅನೇಕರಿದ್ದರೂ ಯಾರನ್ನು ಆಯ್ಕೆ ಮಾಡಬೇಕೆಂಬ ವಿಷಯದ ಬಗ್ಗೆ ಆದ್ಯತೆ ನೀಡಲಾಯಿತು. ಮೇಲ್ಮನೆ ಚುನಾವಣಾ ರಣತಂತ್ರವೇ ಇಂದಿನ ಸಭೆಯಲ್ಲಿ ಕೇಂದ್ರೀಕೃತವಾಯಿತು.
ಸಚಿವರಾದ ಎಂ. ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ್, ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡಾ ಕೋರ್ ಕಮಿಟಿ ಸಭೆಯಲ್ಲಿ ಉಪಸ್ಥಿತರಿದ್ದರು.