ಬೆಂಗಳೂರು: ಕರ್ನಾಟಕದಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತವೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ರಾಜ್ಯದಲ್ಲಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕಾಗಿ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಭಾರತೀಯ ಜನತಾ ಪಕ್ಷವು ಜನರ ಸೇವೆಗೆ ಬದ್ಧವಾದ ಪಕ್ಷ. ಇತರ ಪಕ್ಷಗಳಂತಲ್ಲ. “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಧ್ಯೇಯವಾಕ್ಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
























































