ಬೆಳಗಾವಿ: ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಬೆನ್ನಲ್ಲೇ ಇದೀಗ ಮತ್ತೊಂದು ಹೋರಾಟಕ್ಕೆ ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವ ಒಪ್ಪದ ನಾಯಕರ ಗುಂಪು ಈ ಹೋರಾಟ ನಡೆಸಲು ಸಿದ್ಧತೆ ನಡೆಸಿರುವ ಬೆಳವಣಿಗೆ ಕಮಲ ಪಾಳಯದಲ್ಲಿ ಕುತೂಹಲ ಕೆರಳಿಸಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಈ ಗುಂಪು ಬಿಜೆಪಿಯ ಅತೃಪ್ತ ನಾಯಕರನ್ನು ಒಗ್ಗೂಡಿಸಿ ಬಳ್ಳಾರಿ ಯಾತ್ರೆಗೆ ಮುಂದಾಗಿದ್ದಾರೆ. ಸೆಪ್ಟೆಂಬರ್ 17ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಗಾವಿಯಲ್ಲಿ ಬಿಜೆಪಿಯ ನಾಯಕರು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಗಾವಿಯದ ಖಾಸಗಿ ರೆಸಾರ್ಟ್ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ನಡೆದಿರುವ ಈ ಸಭೆಯಲ್ಲಿ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್, ಅಣ್ಣಾಸಾಹೇಬ್ ಜೊಲ್ಲೆ, ಬಿ.ಪಿ.ಹರೀಶ್, ಎನ್.ಆರ್.ಸಂತೋಷ್ ಭಾಗಿಯಾಗಿದ್ದರು ಎನ್ನಲಾಗಿದೆ. ಮುಡಾ ವಿಚಾರದಲ್ಲಿ ಮೈಸೂರು ಪಾದಯಾತ್ರೆಗೆ ಪ್ರತಿಯಾಗಿ ಬಳ್ಳಾರಿ ಯಾತ್ರೆ ನಡೆಸಿ ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು ಹೊಡೆಯಲು ಈ ನಾಯಕರು ಮುಂದಾಗಿದ್ದಾರೆ ಎಂಬ ಚರ್ಚೆ ನಡೆದಿದೆ.