ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರುಕಾರು ಬಿಟ್ಟು ಸೈಕಲ್ ಏರಿ ಗಮನಸೆಳೆದರು.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯದಾದ್ಯಂತ ಸೈಕಲ್ ಜಾಥಾ ನಡೆಸಿದರು. ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ಗಮನಸೆಳೆಯಿತು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದಲೂ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ರಸ್ತೆ ತಡೆ ನಡೆಸಲಾಯಿತು. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಹಿತ ಅನೇಕ ನಾಯಕರು ಭಾಗಿಯಾದರು.
ಸರ್ಕಾರದ ಕ್ರಮವನ್ನು ಖಂಡಿಸಿದ ಸಂಸದ ಬ್ರಿಜೇಶ್ ಚೌಟ, ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಮತ್ತು ವಾಲ್ಮೀಕಿ ನಿಗಮದ ಭ್ರಷ್ಟಾಚಾರದಂತಹ ಅವ್ಯವಸ್ಥೆಗಳಿಂದ ಕಂಗೆಟ್ಟು ಹೋಗಿರುವ ಕಾಂಗ್ರೆಸ್ ಸರಕಾರ ಹಣವನ್ನು ಸರಿದೂಗಿಸಲು ಸಾಮನ್ಯ ಜನರ ಕಿಸೆಗೆ ಕನ್ನ ಹಾಕುತ್ತಿರುವುದು ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.