ಬೆಂಗಳೂರು : ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಸಂಬಂಧ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಸುದೀರ್ಘ ಕಾರ್ಯತಂತ್ರ ರೂಪಿಸಲಾಯಿತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು. ಬೇಡಿಕೆ ಇರುವ ಪ್ರಮಾಣ ಹಾಗೂ ಲಬ್ಯತೆಯ ಪ್ರಮಾಣ ಬಗ್ಗೆ ಮಾಹಿತಿ ಪಡೆದು ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಲಹೆ ವ್ಯಕ್ತವಾಯಿತು.
ಕರಾವಳಿ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರುವ ಸಂಬಂಧ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ಥಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಸಭೆಯ ತೀರ್ಮಾನದ ಬಗ್ಗೆ ಮಾಹಿತಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.