ನವದೆಹಲಿ: ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಿಯೋಗದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆಯಲ್ಲಿ, ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಘಟಕರು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಡ್ಡಾ, ಸಿಜೆಪಿ ನಿಯೋಗವು ಪರೀಕ್ಷೆ ಮತ್ತು ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಐದು ಅಂಶಗಳ ಲಿಖಿತ ಪ್ರಸ್ತಾವನೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರದ ಮುಂದಿಟ್ಟಿದೆ ಎಂದು ಹೇಳಿದ್ದಾರೆ.
ಮಾತುಕತೆ ವೇಳೆ ಸರ್ಕಾರ, ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕರಣಗಳನ್ನೂ ದಾಖಲಿಸಲಾಗುವುದಿಲ್ಲ ಎಂದು ಭರವಸೆ ನೀಡಿದೆ ಎಂದು ನಡ್ಡಾ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸರ್ಕಾರ ಸಂತಾಪ ಸೂಚಿಸಿದ್ದು, ನಿಯಮಾನುಸಾರ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರ ನೀಡುವುದಾಗಿ ಭರವಸೆ ನೀಡಿದೆ ಎಂದೂ ಅವರು ಹೇಳಿದ್ದಾರೆ.
ಇದೇ ವೇಳೆ, ಪರೀಕ್ಷೆ ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದ ಐದು ಅಂಶಗಳ ಪ್ರಸ್ತಾವನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಸಿಜೆಪಿ ನಿಯೋಗದೊಂದಿಗೆ ಮುಂದಿನ ದಿನಗಳಲ್ಲೂ ಮಾತುಕತೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಯುವಕರು ಶಾಂತಿಯುತವಾಗಿ ಪ್ರತಿಭಟನೆ ಅಂತ್ಯಗೊಳಿಸಿ, ಸಂವಾದ ಪ್ರಕ್ರಿಯೆ ಮುಂದುವರಿಯಲು ಸಹಕರಿಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.






































































