ಬೆಂಗಳೂರು: ‘ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯ ಹಾಗೂ ದೇಶಕ್ಕೆ ಆಸ್ತಿ. ಪಕ್ಷ ಯಾವ ತೀರ್ಮಾನ ಮಾಡುತ್ತದೆಯೋ ನಾನು ಅದಕ್ಕೆ ಬದ್ಧವಾಗಿರುತ್ತೇನೆ. ಅವರು ಪಕ್ಷಕ್ಕಾಗಿ ಅನೇಕ ತ್ಯಾಗ ಮಾಡಿದ್ದಾರೆ. ಮಧ್ಯರಾತ್ರಿ ತಮ್ಮ ಶಾಸಕಾಂಗ ಪಕ್ಷದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ಲಾಕ್ ಅಧ್ಯಕ್ಷರು ಇಂದು ಎಐಸಿಸಿ ಅಧ್ಯಕ್ಷರಾಗಿದ್ದು ಇದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಧ್ಯ. ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಸಂತೋಷದಿಂದ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.