ಬೆಂಗಳೂರು: ಪೆಟ್ರೋಲ್ ಡೀಸೆಕ್ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಬೀದಿಗಿಳಿದಿವೆ. ಈಗಾಗಲೇ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಇದೀಗ ಬಜೆಟ್ ನಂತರದ ವಿದ್ಯಮಾನಗಳನ್ನು ಮುಂದಿಟ್ಟು ದೇಶವ್ಯಾಪಿ ಮತ್ತೊಂದು ಹೋರಾಟದ ಅಖಂಡವನ್ನು ಸೃಷ್ಟಿಸಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿರುವ ಪ್ರತಿಭಟನೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಹಾಗೂ ಜನಸಾಮಾನ್ಯರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತ ಬಳಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಬೃಹತ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಸ್.ಆರ್.ಪಾಟೇಲ್, ಸಂಸದರು, ಶಾಸಕರು ಹಾಗೂ ಕಾಂಗ್ರೆಸ್ ಧುರೀಣರನೇಕರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ನಾಯಕರು ತಿಳಿಸಿದ್ದಾರೆ.