ಬೆಂಗಳೂರು: ಬಿಜೆಪಿ ನಾಯಕರ ಹೇಳಿಕೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ನಡೆಯುತ್ತಿರುವ ದಾಳಿಗಳ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ಶುಕ್ರವಾರ ಕೊರಟಗೆರೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಡಾ.ಜಿ. ಪರಮೇಶ್ವರ್ ಅವರ ಮೇಲೆ ಕಲ್ಲುತೂರಾಟ ಮಾಡಲಾಗಿದೆ. ಅವರು ನಾಮಪತ್ರ ಸಲ್ಲಿಸುವ ವೇಳೆಯೂ ಇದೇ ಪ್ರಯತ್ನ ನಡೆದಿದ್ದು, ಅಂದು ಅವರ ಬದಲಿಗೆ ಮಹಿಳಾ ಪೊಲೀಸ್ ಪೇದೆಗೆ ಕಲ್ಲು ತಾಗಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ವರುಣಾದಲ್ಲೂ ಇಂತಹ ಪ್ರಯತ್ನ ಮಾಡಲಾಗಿದೆ. ಇನ್ನು ಹೊಸಕೋಟೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪತ್ನಿ ಕಾರಿನ ಮೇಲೆ ದಾಳಿ ನಡೆದಿತ್ತು. ಇದಕ್ಕೆ ಪೂರಕವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳಾಗುತ್ತವೆ ಎಂದು ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರು ದಾಖಲಿಸಿದೆ ಎಂದು ಬೆಳಕುಚೆಲ್ಲಿದರು.
ಅಮಿತ್ ಶಾ ಹೇಳಿಕೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ನಡೆಯುತ್ತಿರುವ ದಾಳಿಗಳ ಹಿಂದೆ ಬಿಜೆಪಿ ಷಡ್ಯಂತ್ರವಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಪಕ್ಷದ ಪದಾಧಿಕಾರಿಗಳಿಗೆ ಪತ್ರ ಬರೆದು ನಿಮ್ಮ ಭಾಗದ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳ ವಿವರ ಕೇಳಿದ್ದಾರೆ. ಇವೆಲ್ಲವನ್ನು ನೋಡಿದರೆ ಬಿಜೆಪಿ ಷಡ್ಯಂತ್ರ ಮಾಡಿ ರಾಜ್ಯ ಚುನಾವಣಾ ವಿಚಾರಗಳ ಗಮನ ಬೇರೆಡೆ ಸೆಳೆಯಲು ಚಿತಾವಣೆ ಮಾಡುತ್ತಿದ್ದಾರೆ ಎಂದು ರಮೇಶ್ ಬಾಬು ದೂರಿದರು.
ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ನಾಯಕರು ರಾಜ್ಯ ಚುನಾವಣೆಯಲ್ಲಿ ಅಶಾಂತಿ ಮೂಡಿಸುವ ಕಾರ್ಯ ನೀಡಿದ್ದಾರೆ. ಈ ಸಂದರ್ಭದಲ್ಲಿ ನಾವು ಚುನಾವಣಾ ಆಯೋಗಕ್ಕೆ ಪ್ರಶ್ನೆ ಮಾಡುತ್ತೇವೆ. ರಾಜ್ಯದಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಆಯೋಗ ವಿಫಲವಾಗಿದೆ. ರಾಜ್ಯ ಚುನಾವಣೆ ಮುಕ್ತವಾಗಿ ಭಯಮುಕ್ತವಾಗಿ ನಡೆಯಬೇಕು. ಈ ಷಡ್ಯಂತ್ರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ರಮೇಶ್ ಬಾಬು ಆಗ್ರಹಿಸಿದರು.





















































