ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ 6 ಸ್ಥಾನಗಳ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ 3 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ ಕೇವಲ ಒಂದು ಸ್ಥಾನಕ್ಕಷ್ಟೇ ತೃಪ್ತಿಪಟ್ಟುಕೊಂಡಿದೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡು ಹೆಚ್ಚುವರಿ ಕ್ಷೇತ್ರಗಳನ್ನು ಗೆದ್ದು ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ವಿಧಾನ ಪರಿಷತ್ ಚುನಾವಣೆಯಲ್ಲೂ ಭರ್ಜರಿ ಏಟು ನೀಡಿದೆ.
ಈ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಎರಡು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಜೆಡಿಎಸ್ ಪಕ್ಷ ತನ್ನೆರಡು ಸ್ಥಾನಗಳನ್ನು ಉಳಿಸಿಕೊಂಡಿದೆ.
ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರ ಕ್ಷೇತ್ರನ್ನು ಜೆಡಿಎಸ್ ಉಳಿಸಿಕೊಂಡಿದ್ದು, ಪಕ್ಷದ ಅಭ್ಯರ್ಥಿ ಭೋಜೇಗೌಡ ಪುನರಾಯ್ಕೆಯಾಗಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು ಪಕ್ಷದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಗೆದ್ದಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜೆಡಿಎಸ್ ಈ ಚುನಾವಣೆಯಲ್ಲೂ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಮೈತ್ರಿ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಗೆದ್ದಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಕಾಂಗ್ರೆಸ್ ಪಕ್ಷದ ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ್ ಪುನರಾಯ್ಕೆಯಾಗಿದ್ದಾರೆ.





















































