ಬೆಂಗಳೂರು: ದಿಢೀರ್ ನಿರ್ಧಾರದಲ್ಲಿ ರಾಜ್ಯದ ಕೊರೋನಾ ಪೀಡಿತ ನಗರಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಲಾಗಿದೆ. ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಕೊರೋನಾ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಮುಂಜಾಗ್ರತಾ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು. ರಾಜ್ಯದಲ್ಲಿ ಕೋವಿಡ್ 19ರ ಪರಿಸ್ಥಿತಿ ಹಾಗೂ ಈ ಸಾಂಕ್ರಾಮಿಕದ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಿಎಂ ಯಡಿಯೂರಪ್ಪ ಅವರು ಮಾಹಿತಿ ಹಂಚಿಕೊಂಡರು..
ಬೆಂಗಳೂರು ಮತ್ತು ಇತರ 6 ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದರೂ, ಮರಣ ಪ್ರಮಾಣ ರಾಜ್ಯದಲ್ಲಿ ಶೇ. 50ರಷ್ಟು ಇರುವುದು ಸಮಾಧಾನದ ಸಂಗತಿ. ಈ ಕುರಿತು ಕೇಂದ್ರ ಸರ್ಕಾರವೂ ತೃಪ್ತಿ ವ್ಯಕ್ತಪಡಿಸಿದೆ.
ಇದೇ ವೇಳೆ, ಜ್ಯೋತಿಬಾ ಫುಲೆ ಜನ್ಮ ದಿನವಾದ ಏಪ್ರಿಲ್ 11 ರಿಂದ ಅಂಬೇಡ್ಕರ್ ಜಯಂತಿಯ ದಿನವಾದ ಏಪ್ರಿಲ್ 14ರ ವರೆಗೆ ಲಸಿಕಾ ಆಂದೋಲನ ಹಮ್ಮಿಕೊಳ್ಳುವಂತೆ ಪ್ರಧಾನಿ ಕರೆ ನೀಡಿದ್ದಾರೆ.
ಈ ನಡುವೆ, ಕೊರೋನಾ ಸೋಂಕು ಹೆಚ್ಚಿರುವ ನಗರಗಳಾದ ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ, ಬೀದರ್, ತುಮಕೂರು, ಉಡುಪಿ-ಮಣಿಪಾಲಗಳಲ್ಲಿ ಏಪ್ರಿಲ್ 10ರಿಂದ 20ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಅಬಾಧಿತವಾಗಿರುತ್ತವೆ ಎಂದು ಸಿಎಂ ತಿಳಿಸಿದ್ದಾರೆ.