ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀವಾಗಿ ಹೆಚ್ಚಳವಾಗುತ್ತಿದ್ದು, ಪ್ರತಿನಿತ್ಯ 2000 ಆಸುಪಾಸಿನಲ್ಲಿದ್ದ ಹೊಸ ಸೋಂಕಿತರ ಸಂಖ್ಯೆ ಈಗ 6 ಸಾವಿರ ಗಡಿ ದಾಟಿದೆ. ಪ್ರಮುಖವಾಗಿ ವಿದರ್ಭ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿವೆ.
ಈ ಸಂದಿಗ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸುತ್ಯಿದ್ದಾರೆ. ಸೋಂಕು ನಿಯಂತ್ರಣ ಸಂಬಂಧ ಮಹಾರಾಷ್ಟ್ರದಲ್ಲಿ ಕಠಿಣ ನಿಯಮಾವಳಿಗಳನ್ನು ಜಾರಿ ಮಾಡಲಾಗಿದ್ದು, ಸಾರ್ವಜನಿಕ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ.
ಇದೀಗ ಸೋಕಿಣ ಪ್ರಮಾಣ ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ನಿಯಂತ್ರಣ ಸಂಬಂಧ ರಾತ್ರಿ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಸಂಜೆ 5 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಅಂದರೆ 12 ಗಂಟೆಗಳ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಉನ್ನತ ಮಟ್ಟದ ಸಭೆ ಕರೆದು ತೀರ್ಮಾನ ಕೈಗೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.