ನವದೆಹಲಿ: ದೇಶದಲ್ಲಿ ಕೊರೋನಾ ವೈರಾಣು ಹಾವಳಿ ಮತ್ತೆ ಸವಾಲಾಗಿದೆ. ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚಳವಾಗಿದ್ದು ಸೋಕು ತಡೆ ಸಂಬಂಧ ಕೇಂದ್ರ ಸರ್ಕಾರ ಲಸರತ್ತು ನಡೆಸುತ್ತಿದೆ.
ಕೊರೋನಾ ರೂಪಾಂತರಿ ತಳಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ನಿಯಂತ್ರಣ ಕ್ರಮ ವಹಿಸಲು ಎಲ್ಲಾ ರಾಜ್ಯಗಳಿಗೆ ಸೂಚಿಸಿರುವ ಕೇಂದ್ರ ಸರ್ಕಾರ ಇದೀಗ ಮುಂದಿನ ಕ್ರಮಗಳ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಬುಧವಾರ ಮಹತ್ವದ ಸಭೆ ನಡೆಯಲಿದೆ.
ದೇಶದಲ್ಲಿ ಕೋವಿಡ್ ನ ಹೊಸ ಜೆಎನ್.1 ರೂಪಾಂತರದ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿತ್ತು. ಇದರ ಜೊತೆಯಲ್ಲೇ ಸೋಂಕಿನ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಡಿಸೆಂಬರ್ 20ರಂದು ಕೊವಿಡ್ ನಿಯಂತ್ರಣ ಸಂಬಂದ ಸಭೆ ನಡೆಸಲಿದ್ದಾರೆ. ಆರೋಗ್ಯ ಸೌಲಭ್ಯಗಳು ಮತ್ತು ಸೇವೆಗಳ ಪರಿಶೀಲನಾ ಸಿದ್ಧತೆ ಸಭೆಯನ್ನು ಮನ್ಸುಖ್ ಮಾಂಡವಿಯಾ ಅವರು ನಡೆಸಲಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಮುಖವಾಗಿ ರಾಜ್ಯಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ನಾಳೆ ಮಹತ್ತ್ವದ ನಿರ್ಧಾರ ಘೋಷಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.







































































