ಕೋವಿಡ್ ನಿಯಂತ್ರಣ ಸಭೆ.. ಆಕ್ಸಿಜನ್, ರೆಮಿಡಿಸಿವಿರ್ ಒದಗಿಸಲು ಕ್ರಮ.. ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲು ಸೂಚನೆ
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ಸೋಂಕು ತಡೆ ಸಂಬಂಧ ಸರ್ಕಾರ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಅವರು ಇಂದು ನಡೆಸಿದ ಸಭೆ ಗಮನಸೆಳೆಯಿತು.
ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾರ್ಗಸೂಚಿ ಪಾಲಿಸಲು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು ಎಂದವರು ನಿರ್ದೇಶನ ನೀಡಿದರು.
ಆಕ್ಸಿಜನ್ ಲಭ್ಯತೆ ಬಗ್ಗೆ ನಿರಂತರ ನಿಗಾ ವಹಿಸಬೇಕು. ಖಾಸಗಿ ಅಥವಾ ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಬಾರದು. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ 24 ತಾಸು ಕೆಲಸ ಮಾಡಬೇಕು ವೈದ್ಯರು ಸ್ವತಃ ಕೋವಿಡ್ ವಾರ್ಡುಗಳಿಗೆ ಹೋಗಿ ನಿಯಮಿತವಾಗಿ ಪರಿಶೀಲಿಸಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದರು.
ಗೋಕಾಕ, ಸವದತ್ತಿ ಹಾಗೂ ಬೆಳಗಾವಿ ಸೇರಿದಂತೆ ಕೆಲ ತಾಲ್ಲೂಕುಗಳಲ್ಲಿ ಸೋಂಕಿನ ಪ್ರಮಾಣ ದಿಢೀರ್ ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಡಿಸಿಎಂ, ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ತಿಳಿಸಿದರು. ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಗೆ ಅಗತ್ಯವಿರುವ ಪ್ರಯೋಗಾಲಯದ ಸ್ಥಾಪನೆಗೆ ಅಗತ್ಯವಿರುವ ಪ್ರಸ್ತಾವವನ್ನು ಕಳಿಸಿದರೆ ಇದಕ್ಕೆ ಸರಕಾರದ ಮಟ್ಟದಲ್ಲಿ ಮಂಜೂರಾತಿ ಒದಗಿಸಲಾಗುವುದು ಎಂದು ತಿಳಿಸಿದರು.