ಬಾಗಲಕೋಟೆ: ಭ್ರಷ್ಡಚಾರದ ಆರೋಪ, ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ಮತ್ತು ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಭೂಗರ್ಭ ಶಾಸ್ತ್ರಜ್ಞ ಫಯಾಜ್ ಮತ್ತು ಲಿಂಗರಾಜು ಅವರುಗಳನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ..
ಈ ಇಬ್ಬರು ಅಧಿಕಾರಿಗಳ ಮೇಲೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತು ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವರು ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಾಗಲಕೋಟೆಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಫಯಾಜ್ ಪ್ರಸ್ತುತ ಚಿತ್ರದುರ್ಗ ಜಿಲ್ಲೆಯಲ್ಲಿ ಭೂಗರ್ಭಶಾಸ್ತ್ರಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ, ಕಿರುಕುಳ ಕೊಡುವುದು, ಹಾಗೂ ಸರ್ಕಾರದ ಆದೇಶವನ್ನು ಪಾಲನೆ ಮಾಡದೆ ಕಾರಣ,ಹಿರಿಯ ಅಧಿಕಾರಿಗಳ ಜೊತೆ ಚರ್ಚೆಸಿ ಅಮಾನತು ಮಾಡಲಾಗಿದೆ ಎಂದರು. ಲಿಂಗರಾಜ ಎಂಬವರ ಮೇಲೂ ಇದೇ ರೀತಿ ಆರೋಪ ಕೇಳಿ ಬಂದ ಕಾರಣ, ಅವರನ್ನೂ ಅಮಾನತುಪಡಿಸಲಾಗಿದೆ ಎಂದು ವಿವರಿಸಿದರು.
ಇಲಾಖೆಯಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಮೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಸಾರ್ವಜನಿಕರಿಗೆ ಯಾರಾದರೂ ಅನಗತ್ಯವಾಗಿ ತೊಂದರೆ ಕೊಡುವುದು ಕೇಳಿ ಬಂದರೆ, ಅಂತಹರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ನಿರಾಣಿ ಅವರು ಎಚ್ಚರಿಕೆ ಕೊಟ್ಟರು.