ಬೆಂಗಳೂರು: ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ಜನಪರ ಕಾರ್ಯಕ್ರಮ” ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಮೂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೇ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ, ತಹಸೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯೇ ವಾಸ್ತವ್ಯ ಮಾಡುತ್ತಿದ್ದರು.
ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ರಾಜ್ಯದಲ್ಲಿ ಅತಿ ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ತಿಂಗಳ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ.
ಏ.17ರಂದು ಯಾದಗಿರಿ ಜಿಲ್ಲೆಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸುವಿಕೆ ರದ್ದುಗೊಳಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.