ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣ ಬಗ್ಗೆ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ನವದೆಹಲಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು ಎಂದರು. ಆದರೆ, ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್ರನ್ನು ತಡೆದಿದ್ದು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಅಷ್ಟೇ ಅಲ್ಲ, ಈವರೆಗೂ ಸಂಸದರಾಗಿದ್ದ ಡಿಕೆಶಿ ಸಹೋದರನ ಕೊಡುಗೆ ಏನು ಎಂದೂ ಅವರು ಪ್ರಶ್ನಿಸಿದರು.
ಇದೇ ವೇಳೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೀಶ್ವರ್ ಕಣಕ್ಕಿಳಿಯುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸದ ಹೆಚ್ಡಿಕೆ, ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದರು.