ಬೆಂಗಳೂರು: ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಫ್ಲೈಓವರ್ ಕಾಮಗಾರಿಗೆ ಬಳಸಿರುವುದು ಈ ವರ್ಗದ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರುತ್ತದೆ. ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಶ್ರೀರಾಮುಲು ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ಜಾರಿಗೆ ತಂದಿದ್ದೆವು. 30 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟು ಆ ಹಣವನ್ನು ಅವರಿಗಾಗಿಯೇ ಖರ್ಚು ಮಾಡಲು ನಾವು ಕಾನೂನು ರೂಪಿಸಿದ್ದೆವು ಎಂದರು.
ಕಳೆದ ಬಜೆಟ್ ನಲ್ಲಿ ಇದು 17 ಸಾವಿರ ಕೋಟಿಗೆ ಇಳಿದಿತ್ತು. ಆರ್ಥಿಕ ಸಂಪನ್ಮೂಲ ಕೊರತೆ ಪರಿಸ್ಥಿತಿ ಅರಿತು ನಾವು ಈ ಬಗ್ಗೆ ಮಾತನಾಡಿರಲಿಲ್ಲ. ಈಗ 10 ಸಾವಿರ ಕೋಟಿಗೆ ಬಂದಿದ್ದು, ಜತೆಗೆ ಆ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದೆ. ಇದು ಬಿಜೆಪಿಯು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ವಿಚಾರವಗಿ ಬದ್ಧತೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಡಿಕೆಶಿ ಹೇಳಿದರು.
ಕಾರಜೋಳ ಅವರು ಹಾಗೂ ಶ್ರೀರಾಮುಲು ಅವರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಕಾರಜೋಳ ಅವರು ಉಪಮುಖ್ಯಮಂತ್ರಿಯಾಗಿ ಅವರ ಧ್ವನಿ ಕಳೆದುಕೊಂಡಿದ್ದಾರೆ. ಬಿಜೆಪಿಯ ದಲಿತ ವಿರೋಧಿ ನೀತಿಯನ್ನು ಇವರಿಂದ ತಡೆಯಲು ಸಾಧ್ಯವಾಗಿಲ್ಲ. ಈ ಇಬ್ಬರ ಸಮ್ಮತಿ ಇಲ್ಲದೆ ಈ ಇಲಾಖೆ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಇದು ದಲಿತ ವಿರೋಧಿ ಸರ್ಕಾರವಾಗಿದ್ದು, ಇದು ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ ಎಂದವರು ಹೇಳಿದರು.