ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಂಥಾಹ್ವಾನ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಂಡವರು. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಡಿಕೆಶಿ ಅವರು ನಳಿನ್ ಕುಮಾರ್ಗೆ ಸವಾಲು ಹಾಕಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಳಿನ್ ಕುಮಾರ್ ಹೇಳಿಕೆ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ನಲ್ಲಿ ಈಗಲೇ ಮ್ಯೂಸಿಕಲ್ ಚೇರ್ ಆಟ ನಡೆಯುತ್ತಿದೆ ಹಾಗೂ ಸಿದ್ದರಾಮಯ್ಯ ರಾಜ್ಯ ಕಂಡ ಮಹಾ ಮೋಸಗಾರ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾಂಗ್ರೆಸ್ನಲ್ಲಿ ಮ್ಯೂಸಿಕಲ್ ಚೇರ್ ಆಡುತ್ತಿದ್ದೇವೋ, ಬೇರೆ ಆಡುತ್ತಿದ್ದೇವೋ, ಆದರೆ ಅವರ ಪಕ್ಷದಲ್ಲಿ ಆಡುತ್ತಿರುವ ಆಟವನ್ನು ಏನೆಂದು ಕರೆಯುತ್ತಾರೆ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯನವರು ಕೊಟ್ಟ ಮಾತು ತಪ್ಪಿಲ್ಲ. ಅವರ ಅಧಿಕಾರ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಾರೆ. ಅವರು ಪ್ರಮಾಣ ವಚನ ಸ್ವೀಕರಿಸಿ ಕೊಟ್ಟ ಮಾತನ್ನು ಶೇ.99ರಷ್ಟು ಉಳಿಸಿಕೊಂಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದಾರೆ, ಯಾವುದಾದರೂ ಮಾಧ್ಯಮದ ವೇದಿಕೆಯಲ್ಲಿ ಬರಲಿ. ನಾನು ಈ ವಿಚಾರವಾಗಿ ಅವರ ಜತೆ ಚರ್ಚೆ ಮಾಡುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.