ಬೆಂಗಳೂರು: ತಮ್ಮ ಬಗ್ಗೆ ಕೆಪಿಸಿಸಿ ನಾಯಕರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದಾರೆನ್ನಲಾದ ಪಿಸುಮಾತಿನ ಬಗ್ಗೆ ಬೇಸರಗೊಂಡಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ವಿಚಾರದಲ್ಲಿ ಯಾರನ್ನೂ ದೂಷಿಸುವುದಿಲ್ಲ ಎಂದಿದ್ದಾರೆ.
ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯಿಸಿದ ಡಿಕೆಶಿ, ‘ನನ್ನ ಬಗ್ಗೆ ಯಾರು, ಯಾವ ರೀತಿ ಮಾತಾಡಬೇಕೋ ಮಾತನಾಡಿದ್ದಾರೆ. ಅದನ್ನು ಯಾರು ಯಾವ ರೀತಿ ಬಳಸಿಕೊಳ್ಳಬೇಕೋ, ಬಳಸಿಕೊಂಡಿದ್ದಾರೆ. ನಾನು ಬಿಜೆಪಿ ಅವರನ್ನಾಗಲಿ, ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ. ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಬಳಸಿಕೊಂಡಿದ್ದಾರೆ. ನಾನು ಯಾರನ್ನೂ ದೂಷಣೆ ಮಾಡುವುದಿಲ್ಲ. ಇದು ನನ್ನ ವೈಯಕ್ತಿಕವಾದುದಲ್ಲ, ಪಕ್ಷದ ವಿಚಾರ. ಈ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದಾರೆ.
ಈ ಹಿಂದೆ ಬಿಜೆಪಿ ನಾಯಕರ ಧ್ವನಿ ಬಿದ್ದು ಹೋಗಿತ್ತಾ..?
ಕಾಂಗ್ರೆಸ್ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಯಾರು ಏನು ಮಾತನಾಡುತ್ತಾರೋ ಮಾತಾಡಲಿ. ಕಳೆದ ಎರಡು ವರ್ಷಗಳಿಂದ ಯಾರು ಏನೆಲ್ಲಾ ಮಾತನಾಡಿದ್ದಾರೆ ಅದನ್ನೂ ನೋಡಲಿ. ಕೆಲವರು ಮಂಚದ ಮೇಲೆ ಮಾತನಾಡಿದರಲ್ಲಾ. ಅದಕ್ಕೆ ಉತ್ತರ ಯಾಕಿಲ್ಲ? ಯತ್ನಾಳ್ ಅವರ ಹೇಳಿಕೆಗೆ ಸಿ.ಟಿ ರವಿ ಅವರಾಗಲಿ, ಈಗ ಮಾತನಾಡುತ್ತಿರುವವರಾಗಲಿ ಯಾಕೆ ಉತ್ತರ ನೀಡಲಿಲ್ಲ. ಯಡಿಯೂರಪ್ಪ, ವಿಜಯೇಂದ್ರ ಕಲೆಕ್ಷನ್, ಅವರ ಮೊಮ್ಮಗನ ಬಗ್ಗೆ ಮಾತನಾಡಿದಾಗ ಇವರ ಧ್ವನಿ ಏನು ಬಿದ್ದು ಹೋಗಿತ್ತಾ? ಆಗ್ಯಾಕೆ ಮಾತನಾಡಲಿಲ್ಲ?’ ಎಂದು ಡಿಕೆಶಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಡಿ.ಕೆ ಶಿವಕುಮಾರ್, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ವೇದಿಕೆ ಮೇಲೆ ಕರೆತರುವ ಪ್ರಯತ್ನ ಮಾಡುತ್ತೇವೆ ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, ‘ನಾನು ಪಕ್ಷದ ಅಧ್ಯಕ್ಷ, ಆ ಕೆಲಸ ಮಾಡುತ್ತಿದ್ದೇನೆ. ಅವರು ದೊಡ್ಡ ನಾಯಕರು. ಎಲ್ಲರ ಸಂಪರ್ಕ ಇಟ್ಟುಕೊಂಡಿರುವವರು. ಕಾರ್ಯಕರ್ತರ ಜತೆ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ. ನಾನು ಆ ಬಗ್ಗೆ ಮಾತ್ರ ಯೋಚಿಸುತ್ತೇನೆ ಎಂದು ಡಿಕೆಶಿ ಹೇಳಿದರು.