ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಯಾವುದೇ ಹೇಳಿಕೆ ನೀಡದಂತೆ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ಕಾಂಗ್ರೆಸ್ ಪಾಳಯದಲ್ಲಿ ದಿನಕ್ಕೊಂದು ಹೇಳಿಕೆ ಕೇಳಿಬರುತ್ತಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ವರಿಷ್ಠರು ಗಲಿಬಿಲಿಗೊಂಡಿದ್ದಾರೆ. ಈ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳೂ ಸರ್ಕಾರದ ಅಸ್ತಿತ್ವ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿವೆ.
ಈ ವಿದ್ಯಮಾನಗಳ ನಡುವೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ಮ ಪಕ್ಷದ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ ಎಂದಿದ್ದಾರೆ. ಇಂತಹಾ ವಿಚಾರದಲ್ಲಿ ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ ಎಂದು ತಮ್ಮದೇ ದಾಟಿಯಲ್ಲಿ ತಿಳಿಸಿರುವ ಡಿಕೆಶಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ತಾವು ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಇಂತಹಾ ವಿಚಾರದಲ್ಲಿ ಯಾರೂ ಹೇಳಿಕೆ ನೀಡಬಾರದು ಎಂದಿದ್ದಾರೆ. ಆದಾಗಿಯೂ ಯಾರಾದರೂ ಮಾತನಾಡಿದರೆ, ಅಂಥವರಿಗೆ ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಅವರು ನೀಡಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಅಭಿಪ್ರಾಯ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ. ಆ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದರು.