ಬೆಂಗಳೂರು: ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಬುಧವಾರ ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ಮೂಲಕ ಸಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಬಡವರು, ರೈತರು, ನಿರ್ಗತಿಕರು, ಕೂಲಿ ಕಾರ್ಮಿಕರು ಜೀವನ ನಡೆಸುವುದೇ ದುಸ್ತರವಾಗಿದೆ. ಸಿಲೆಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಗಗನಮುಖಿಯಾಗಿದೆ. ಹೀಗಿದ್ದರೂ ಬಿಜೆಪಿ ನೇತೃತ್ವದ ಸರ್ಕಾರ ಶೇ 40 ಕಮಿಷನ್ ಪಡೆಯುತ್ತಿದೆ. ಗುತ್ತಿಗೆದಾರರಿಗೆ ಅನಗತ್ಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.
ಮೇವು ಖರೀದಿಯಲ್ಲೂ ಶೇ 30 ಕಮಿಷನ್ ಪಡೆಯಲಾಗುತ್ತಿದೆ ಎಂದು ಮಠಾಧೀಶರು ದೂರಿದ್ದಾರೆ. ಇವೆಲ್ಲವನ್ನು ನೋಡಿದರೆ ಬಿಜೆಪಿ ಸರ್ಕಾರದ ಸಚಿವರು, ಅಧಿಕಾರಿಗಳು ಕಮಿಷನ್ ದಂದೆಯಲ್ಲಿ ಮುಳುಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ದೂರಿದರು.